ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಕಲಬುರ್ಗಿ, ಬೀದರ್, ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ. ಅಲ್ಲದೆ, ಭಾರೀ ಮಳೆಯಿಂದ ನದಿ, ಹಳ್ಳ-ಕೊಳ್ಳಗಳಲ್ಲಿ ಪ್ರವಾಹ ಉಂಟಾಗುವ ಮುನ್ಸೂಚನೆ ಇದೆ. ಕಳೆದ ಎರಡು ವಾರಗಳಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುತ್ತಿದ್ದು, ಅತಿವೃಷ್ಟಿ ಉಂಟಾಗಿದೆ.
ವಾಯುಭಾರ ಕುಸಿತದ ಪರಿಣಾಮದಿಂದ ತೆಲಂಗಾಣದಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪ್ರಭಾವ ರಾಜ್ಯದ ಪೂರ್ವ ಭಾಗದ ಜಿಲ್ಲೆಗಳ ಮೇಲೆ ಉಂಟಾಗಲಿದ್ದು, ಇನ್ನೆರಡು ದಿನ ಕಲಬುರ್ಗಿ, ಬೀದರ್ ಭಾಗದಲ್ಲಿ ವ್ಯಾಪಕ ಹಾಗೂ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿದೇರ್ಶಕ ವಿ.ಎಸ್.ಪ್ರಕಾಶ್ ತಿಳಿಸಿದರು.
ಕರಾವಳಿ, ಮಲೆನಾಡು ಹಾಗೂ ಉತ್ತರಕರ್ನಾಟಕದ ಭಾಗದಲ್ಲಿ ಮಳೆ ಮುಂದುವರೆಯಲಿದೆ. ಆದರೆ ತೀವ್ರತೆ ದಿನದಿಂದ ದಿನಕ್ಕೆ ಕಡಿಮೆಯಾಗಲಿದೆ. ಇನ್ನೆರೆಡು ದಿನಗಳ ನಂತರ ಮಲೆನಾಡು ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ಮಳೆಯ ಪ್ರಮಾಣ ತಗ್ಗಲಿದೆ.
ರಾಜ್ಯದ ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆ ಕಳೆದ ಮೂರು ದಿನಗಳಿಂದ ಬೀಳುತ್ತಿತ್ತು. ಅದೇ ರೀತಿ ಮೋಡ ಕವಿದ ವಾತಾವರಣ ಇನ್ನೂ ಒಂದೆರೆಡು ದಿನ ಮುಂದುವರೆಯುವುದಲ್ಲದೆ ಕೆಲವೆಡೆ ಹಗುರದಿಂದ ಮಳೆಯಾಗಲಿದೆ. ಸಂಜೆ ಹಾಗೂ ರಾತ್ರಿ ವೇಳೆ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ ಎಂದು ಹೇಳಿದರು.
ಮುಂಗಾರು ಚೇತರಿಸಿಕೊಂಡಿರುವುದರಿಂದ ರಾಜ್ಯದಲ್ಲಿ ಈ ವಾರಾಂತ್ಯದವರೆಗೂ ಸಾಧಾರಣ ಪ್ರಮಾಣದ ಮಳೆ ಚದುರಿದಂತೆ ಅಲ್ಲಲ್ಲಿ ಮುಂದುವರೆಯುವ ಮುನ್ಸೂಚನೆಗಳಿವೆ ಎಂದು ಅವರು ತಿಳಿಸಿದರು.