ಗದಗ: ದೇಶದಲ್ಲಿ ಕೇಂದ್ರ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ‘ಒಂದು ರಾಷ್ಟ್ರ ಒಂದು ಚುನಾವಣೆ’ಯ ಹೆಸರಿನಲ್ಲಿ ಕೇಂದ್ರ ಸರಕಾರ ತನ್ನ ಅವಧಿಯನ್ನು ಮುಂದೂಡುವ ಪ್ರಯತ್ನ ಮಾಡಿದರೆ ಜನರು ಯಾವ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಯ ಹಾಗೂ ಹಣದ ಉಳಿತಾಯ ಕಾರಣ ನೀಡಿ, ಅಧಿಕಾರದ ಅವಧಿಯನ್ನು ಮುಂದುವರಿಸಲು ಪ್ರಯತ್ನ ಪಟ್ಟರೆ ಯಾರೂ ಸಹಿಸುವುದಿಲ್ಲ ಎಂದು ಹೇಳಿದರು.
ಕಳೆದ ನಾಲ್ಕು ವರ್ಷಗಳ ಹಿಂದೆಯೇ ‘ಒಂದು ರಾಷ್ಟ್ರ ಒಂದು ಚುನಾವಣೆ’ಯ ಕುರಿತು ಮಾತನಾಡಿದ್ದ ಕೇಂದ್ರ ಸರಕಾರ ನಾಲ್ಕು ವರ್ಷಗಳ ಕಾಲ ಸುಮ್ಮನಿದ್ದು, ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ದೇಶದ ಪ್ರತಿ ಜಿಲ್ಲೆಗಳಿಗೂ ಇವಿಎಂ ಯಂತ್ರಗಳು ತಲುಪಿದ್ದು, ಪರಿಶೀಲನೆಯೂ ನಡೆದಿವೆ. ಈ ವೇಳೆ ಒಂದು ರಾಷ್ಟ್ರ ಒಂದು ಚುನಾವಣೆ ಸಮಿತಿ ರಚಿಸುವ ಪ್ರಯತ್ನ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವಂತಹ ಕೆಲಸವಾಗಿದೆ.