ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ

ಸಮಗ್ರ ಪ್ರಭ ಸುದ್ದಿ
1 Min Read

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.85 ವರ್ಷದ ನಟಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಪುತ್ರ ವಿನೋದ್​ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ.1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ್ದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ಕನ್ನಡ ದಿಗ್ಗಜ ನಟರಾಟ ರಾಜ್​ಕುಮಾರ್​, ವಿಷ್ಣುವರ್ಧನ್​ ಮುಂತಾದವರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದರು. ಕನ್ನಡ, ತಮಿಳು, ತೆಲುಗು ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಕನ್ನಡ, ತೆಲುಗು, ಮಲಯಾಳಂ, ತುಳು ಮುಂತಾದ ಭಾಷೆಗಳಲ್ಲಿ ನಟಿಸಿ ಲೀಲಾವತಿ ಸೈ ಎನಿಸಿಕೊಂಡರು. ‘ಮದುವೆ ಮಾಡಿನೋಡು’ ಮತ್ತು ‘ಸಂತ ತುಕಾರಾಮ್​’ ಸಿನಿಮಾಗಳಿಗೆ ಲೀಲಾವತಿ ಅವರು 2 ರಾಷ್ಟ್ರ ಪ್ರಶಸ್ತಿ ಪಡೆದಿದ್ದರು.

ಲೀಲಾವತಿ ಅವರು ತುಂಬಿದ ಕೊಡ, ಮಹಾತ್ಯಾಗ, ಭಕ್ತ ಕುಂಬಾರ, ಸಿಪಾಯಿ ರಾಮು, ಗೆಜ್ಜೆ ಪೂಜೆ ಚಿತ್ರಗಳಲ್ಲಿನ ಮನೋಜ್ಞ ಅಭಿನಯಕ್ಕೆ ರಾಜ್ಯ ಪ್ರಶಸ್ತಿ ಪಡೆದಿದ್ದು ಕನ್ನಡದ ಕಂದ ಚಿತ್ರಕ್ಕೆ ಫಿಲ್ಮ್ ಫೇರ್​ ಪ್ರಶಸ್ತಿ ಕೂಡ ಸಿಕ್ಕಿತ್ತು. ಜೀವಮಾನ ಸಾಧನೆಗಾಗಿ 1999ರಲ್ಲಿ ಲೀಲಾವತಿ ಅವರು ಡಾ. ರಾಜ್​ಕುಮಾರ್​ ಪ್ರಶಸ್ತಿ ಪಡೆದರು. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದಿಂದ ಅವರಿಗೆ ಗೌರವ ಡಾಕ್ಟರೇಟ್​ ನೀಡಲಾಗಿತ್ತು.ಲೀಲಾವತಿ ನಿಧನಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು, ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

Share this Article