ಬೆಂಗಳೂರು: ಅತ್ಯಧಿಕ ತೆರಿಗೆ ಪಾವತಿಸುವವರಿಗಾಗಿ ಬೆಂಗಳೂರಿನಲ್ಲಿ ಪ್ರತ್ಯೇಕ ವಿಭಾಗ ಸ್ಥಾಪನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 2023-24ನೇ ಸಾಲಿನಲ್ಲಿ 1 ಲಕ್ಷ ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ಹಾಕಿಕೊಳ್ಳಲಾಗಿದೆ.
ಮದ್ಯದ ಮೇಲೆ ಶೇ 20ರಷ್ಟು ಮತ್ತು ಬಿಯರ್ ಮೇಲೆ ಶೇ 10ರಷ್ಟು ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ಬಿಯರ್ ಮೇಲಿನ ಅಬಕಾರಿ ಸುಂಕ ಶೇ 175 ರಿಂದ 185ಕ್ಕೆ ಹೆಚ್ಚಳವಾಗಲಿದೆ.
ಸ್ಥಿರಾಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ:
ಎಲ್ಲ ಸ್ಥಿರಾಸ್ತಿ ಮಾರ್ಗಸೂಚಿ ದರ ಪರಿಷ್ಕರಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಕೋವಿಡ್ ಸಾಂಕ್ರಾಮಿಕದ ಕಾರಣ 2019ರ ನಂತರ ಸ್ಥಿರಾಸ್ತಿ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿರಲಿಲ್ಲ. ಪ್ರಸ್ತುತ ಮಾರುಕಟ್ಟೆ ದರದಲ್ಲಿ ವ್ಯತ್ಯಾಸವಾಗಿರುವುದರಿಂದ ಪರಿಷ್ಕರಣೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಆದರೆ, ಎಷ್ಟು ಪ್ರಮಾಣದಲ್ಲಿ ಪರಿಷ್ಕರಣೆ ಮಾಡಲಾಗುತ್ತದೆ ಎಂಬ ಮಾಹಿತಿ ನೀಡಿಲ್ಲ.
ಮೋಟಾರು ವಾಹನ ಕಾಯ್ದೆ ಸರಳಗೊಳಿಸಲು ಪ್ರಸ್ತಾಪ:
11,500 ಕೋಟಿ ರೂ.ಗಳ ತೆರಿಗೆ ಸಂಗ್ರಹ ಗುರಿ ಹಾಕಿಕೊಳ್ಳಲಾಗಿದೆ. ಕರ್ನಾಟಕ ಮೋಟಾರು ವಾಹನ ನೋಂದಣಿ ತೆರಿಗೆ ಹೆಚ್ಚಳಕ್ಕೆ ಉದ್ದೇಶಿಸಲಾಗಿದೆ. ಆದರೆ, ಎಷ್ಟು ಪ್ರಮಾಣದಲ್ಲಿ ತೆರಿಗೆ ಹೆಚ್ಚಳ ಮಾಡಲಾಗುತ್ತದ ಎಂಬ ಮಾಹಿತಿ ನೀಡಿಲ್ಲ.
ಗಣಿ ಮತ್ತು ಭೂವಿಜ್ಞಾನ ಕ್ಷೇತ್ರದಿಂದ 9,000 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಹಾಕಿಕೊಳ್ಳಲಾಗಿದೆ.