ಧಾರವಾಡ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರು ಗಣೇಶೋತ್ಸವ ಆಚರಣೆಗೆ ಅನುಮತಿ ಪತ್ರ ಹಸ್ತಾಂತರಿಸಿದ್ದಾರೆ.
ಹುಬ್ಬಳ್ಳಿಯ ಈದ್ಗಾ ಮೈದಾನ ದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡುವಂತೆ ಮೇಯರ್ ಅವರು ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದರು. ಈ ನಡುವೆ ಪಾಲಿಕೆ ಆಯುಕ್ತರು ಅನುಮತಿ ಕೊಡಲು ವಿಳಂಭ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶಾಸಕ ಅರವಿಂದ ಬೆಲ್ಲದ್ ಮತ್ತು ಶಾಸಕ ಮಹೇಶ್ ಟೆಂಗಿನಕಾಯಿ ನೇತೃತ್ವದಲ್ಲಿ ಕಳೆದ ಎರಡು ದಿನಗಳಿಂದ ಹೋರಾಟ ನಡೆಸಿದ್ದರು. ಇದೀಗ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿಯನ್ನು ಪಾಲಿಕೆ ಆಯುಕ್ತರಿಂದಲೇ ಅಧಿಕೃತ ಘೋಷಣೆಯಾಗಿದ್ದು, ಈ ಕುರಿತಾದ ಅನುಮತಿ ಪತ್ರವನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರು ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿ ಅಧ್ಯಕ್ಷ ಸಂಜೀವ್ ಬಡಾಸ್ಕರ್ ಅವರಿಗೆ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಅವರು, ‘ಹೈಕೋರ್ಟ್ ನಿರ್ದೇಶನದ ಮೇರೆಗೆ ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ನಮ್ಮ ನಿರ್ಣಯದಂತೆ ಗಣೇಶ ಹಬ್ಬ ಆಚರಿಸಲು ಅನುಮತಿ ನೀಡಿದ್ದೇವೆ ಎಂದು ಹೇಳಿದರು.