4 ವಾರಗಳಲ್ಲಿ ತಾ.ಪಂ,ಜಿ.ಪಂ ಮೀಸಲಾತಿ ನಿಗಧಿಸಿ ಅನುಸೂಚನೆ ಹೊರಡಿಸಿ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಸಮಗ್ರ ಪ್ರಭ ಸುದ್ದಿ
1 Min Read

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾ ಯಿತಿಗಳ ಚುನಾವಣೆಗಾಗಿ ಕ್ಷೇತ್ರಗಳ ಪುನರ್ ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ನಾಲ್ಕು ವಾರಗಳಲ್ಲಿ ಪೂರ್ಣಗೊಳಿಸಿ ಅಧಿಸೂಚನೆ ಹೊರಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.

ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಲು ಅನುವು ಮಾಡಿಕೊಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಹಾಗೂ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರ ಮರುವಿಂಗಡಣೆಗೆ ಸೀಮಾ ನಿರ್ಣಯ ಆಯೋಗ ರಚಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರುವಿಂಗಡಣೆಯಾಗಿತ್ತು. ಆದರೆ, ಕೆಲವು ಆಕ್ಷೇಪಣೆಗಳು ಬಂದಿರುವ ಹಿನ್ನೆಲೆಯಲ್ಲಿ ಕ್ಷೇತ್ರ ಮರುವಿಂಗಡಣೆಯನ್ನು ಮರು ನಿಗದಿ (ರೀಡೂ) ಮಾಡಬೇಕಾಗಿದೆ. ಆನಂತರ ಕ್ಷೇತ್ರವಾರು ಮೀಸಲಾತಿ ನಿಗದಿಪಡಿಸಬೇಕಾಗುತ್ತದೆ. ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಮಯ ಅವಕಾಶ ಬೇಕೆಂದು ಕೋರಿದರು.

ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಯ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದೆ. ಇದನ್ನು ಪೂರ್ಣಗೊಳಿಸಲು ನಾಲ್ಕು ವಾರ ಕಾಲಾವಕಾಶ ನೀಡಬೇಕೆಂದು ಅಡ್ವೇಕೇಟ್ ಜನರಲ್ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಕೊನೆಯ ಅವಕಾಶವನ್ನು ನೀಡಿತು.

ಇದನ್ನು ಒಪ್ಪದ ನ್ಯಾಯಪೀಠ ಸಂವಿಧಾನ ನಿಯಮದಂತೆ ಚುನಾವಣೆ ನಡೆಸಬೇಕು. ಈಗಾಗಲೇ ಹತ್ತು ವಾರಗಳ ಕಾಲಾವಕಾಶ ನೀಡಲಾಗಿದೆ. ಪುನಃ ಸಮಯವನ್ನು ವಿಸ್ತರಣೆ ಮಾಡಲು ಬರುವುದಿಲ್ಲ. ನಾಲ್ಕು ವಾರಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿಪಡಿಸಿ ಅಂತಿಮಗೊಳಿಸಬೇಕೆಂದು ನಿರ್ದೇಶನ ನೀಡಿ ಮುಂದಿನ ಅರ್ಜಿ ವಿಚಾರಣೆಯನ್ನು ಡಿ.19ಕ್ಕೆ ಮುಂದೂಡಿದೆ.

Share this Article