ಡಿ.6 ಮತ್ತು 7 ರಂದು ಬೆಳಗಾವಿ ಅಧಿವೇಶನದಲ್ಲಿ ಎರಡು ದಿನ ಉತ್ತರ ಕರ್ನಾಟಕ ಸಮಸ್ಯೆ ಕುರಿತು ಚರ್ಚೆ: ಸಭಾಪತಿ ಬಸವರಾಜ ಹೊರಟ್ಟಿ

ಸಮಗ್ರ ಪ್ರಭ ಸುದ್ದಿ
1 Min Read

ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಎರಡು ದಿನಗಳನ್ನು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಕಾಯ್ದಿರಿಸುವುದಾಗಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಎಸ್. ಹೊರಟ್ಟಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಡಿ.6ಮತ್ತು7ರಂದು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತ ಚರ್ಚೆಗೆ ಎರಡು ದಿನ ನಿಗದಿ ಮಾಡಿದ್ದೇವೆ. ಬೆಳಗಾವಿಯಲ್ಲಿ ಅಧಿವೇಶನ ಪ್ರಾರಂಭವಾಗುವುದಕ್ಕೂ ಪೂರ್ವದಲ್ಲೇ ಧರಣಿ, ಪ್ರತಿಭಟನೆ, ಸತ್ಯಾಗ್ರಹ ಮಾಡುವಂತಹ ಸಂಘಟನೆಗಳ ಮುಖಂಡರೊಂದಿಗೆ ಸರ್ಕಾರ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿ ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಹೇಳಿದ್ದರು.

ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸುವ ಹಿನ್ನಲೆಯಲ್ಲಿ ಸರ್ಕಾರಕ್ಕೆ ಸಲಹೆ ನೀಡುವುದು ಸೂಕ್ತ ಎಂದು ನಾನು ಭಾವಿಸಿ ಮುಖ್ಯಮಂತ್ರಿಗಳಿಗೆ ಹಾಗೂ ಕೃಷಿ, ಕಂದಾಯ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಿಗೆ ಪತ್ರ ಬರೆದು ನನ್ನ ಭಾವನೆಗಳನ್ನು ಹಂಚಿಕೊಂಡಿದ್ದೇನೆ ಎಂದು ಹೇಳಿದರು.

ಕರ್ನಾಟಕ ವಿಧಾನ ಮಂಡಲದ ನೂರಐವತ್ತೊಂದನೇ ಅಧಿವೇಶನವನ್ನು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಡಿ.4ರಿಂದ 15ರ ವರೆಗೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಧಿವೇಶನಕ್ಕಾಗಿ ಒಟ್ಟಾರೆ 400ಕ್ಕೂ ಅಧಿಕ ಕೋಟಿ ರೂಪಾಯಿಯನ್ನು ಸರ್ಕಾರ ಖರ್ಚು ಮಾಡುತ್ತಿದೆ ಎಂದರು. ಒಂದು ಅರ್ಥದಲ್ಲಿ ಬೆಳಗಾವಿಯ ಅಧಿವೇಶನ ಎಂದರೆ ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವೇದಿಕೆ ಕಲ್ಪಿಸಿದಂತಾಗಿದೆ ಎಂದರೆ ಅತಿಶಯೋಕ್ತಿ ಎನಿಸಲಾರದು ಎನ್ನುವುದು ಹಲವರ ಅಭಿಪ್ರಾಯವಾಗಿದ್ದು, ಬಹಳಷ್ಟು ಜನ ಈ ರೀತಿಯ ಭಾವನೆಯನ್ನು ನನ್ನ ಮುಂದೆ ವ್ಯಕ್ತಪಡಿಸಿರುವುದಾಗಿ ತಿಳಿಸಿದರು.

Share this Article