ಗದಗ : ಗದಗ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಸೂಕ್ತ ವಾತಾವರಣವಿದ್ದು ತೋಟಗಾರಿಕೆ ಜಿಲ್ಲೆಯಾಗಿಸಲು ಅಧಿಕಾರಿಗಳು ಶ್ರಮಿಸಬೇಕೆಂದು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ( ದಿಶಾ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧೆಡೆ ಮೆಣಸಿನಕಾಯಿ,ಈರುಳ್ಳಿ, ಮಾವು, ಬಾಳೆ, ದ್ರಾಕ್ಷಿ, ದಾಳಿಂಬೆ ಬೆಳೆಯಲಾಗುತ್ತಿದ್ದು ಅದರಲ್ಲಿಯೂ ಮುಂಡರಗಿ ಹಾಗೂ ಶಿರಹಟ್ಟಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಆಯಾ ಪ್ರದೇಶದ ಸಂಭಾವ್ಯತೆಯನ್ನು ಅರಿತುಕೊಂಡು ಯಾವ ತೋಟಗಾರಿಕೆ ಬೆಳೆ ಬೆಳೆದರೆ ಸೂಕ್ತವಾಗುತ್ತದೆ ಎಂದು ಪರಿಶೀಲಿಸಿ 60 ದಿನಗಳೊಳಗೆ ಡಿಪಿಆರ್ ಸಿದ್ಧಪಡಿಸಿ ಸಲ್ಲಿಸಬೇಕು. ನಂತರ ಮ್ಯಾಪಿಂಗ್ ಮಾಡಿ ರೈತರು ಹಾಗೂ ಬ್ಯಾಂಕ ಅಧಿಕಾರಿಗಳೊಂದಿಗೆ ಈ ಕುರಿತು ತರಬೇತಿ ನೀಡಿದರೆ ತೋಟಗಾರಿಕೆಯಲ್ಲಿ ಅತ್ಯುನ್ನತ ಫಲಿತಾಂಶವನ್ನು ಕಾಣಬಹುದಾಗಿದೆ. ಹಾಗೂ ಜಿಲ್ಲೆಯನ್ನು ತೋಟಗಾರಿಕೆ ಜಿಲ್ಲೆಯನ್ನಾಗಿಸಬಹುದು. ಈ ನಿಟ್ಟಿನಲ್ಲಿ ಜಿಲ್ಲೆಗೆ ಮಹತ್ವಪೂರ್ಣ ಅಭಿವೃದ್ಧಿಗೆ ಪ್ರಾಶಸ್ತ್ಯ ಕೊಟ್ಟಂತಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿವರ್ಗ ಕಾರ್ಯ ಪ್ರವೃತ್ತರಾಗಬೇಕು ಎಂದು ತಿಳಿಸಿದರು.
ಯೋಜನೆಗಳ ಅನುಷ್ಟಾನ : ಬಡಜನರ, ದೀನದಲಿತರ, ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ರಾಜ್ಯ ಮತ್ತು ಕೇಂದ್ರ ಸರಕಾರದ ಸಹಭಾಗಿತ್ವದಲ್ಲಿ ಜಾರಿಗೊಳಿಸಲಾಗುತ್ತದೆ. ಯೋಜನೆಯ ಸ್ಪಷ್ಟತೆಯನ್ನು ನಿಖರವಾಗಿ ತಿಳಿದುಕೊಂಡು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿ ಯೋಜನೆಯ ಸೌಲಭ್ಯ ಅರ್ಹರಿಗೆ ತಲುಪಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು. ಬಡಜನರು ಆರ್ಥಿಕವಾಗಿ ಸಾಮಾಜಿಕವಾಗಿ ಮುಂದೆ ಬರಲು ಉದ್ದೇಶ ಇಟ್ಟುಕೊಂಡು ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ. ವಿವಿಧ ಇಲಾಖೆಗಳಿಂದ ಅರ್ಹರಿಗೆ ಕಾನೂನು ಚೌಕಟ್ಟಿನಲ್ಲಿ ಯೋಜನೆಗಳ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದರೂ ಸಹಿತ ಕೆಲವೊಂದು ಸಂದರ್ಭಗಳಲ್ಲಿ ಕಾನೂನಿನ ಕ್ರಮಗಳ ಹಾಗೂ ಹೆಚ್ಚಿನ ಮಾರ್ಗದರ್ಶನ ಪಡೆದು ಅದರಲ್ಲಿ ಸೂಕ್ತ ಮಾರ್ಪಾಡುಗಳೊಂದಿಗೆ ಕಾರ್ಯನಿರ್ವಹಿಸಬೇಕಾತ್ತದೆ ಎಂದು ತಿಳಿಸಿದರು. ಯೋಜನೆಯ ಅನುಷ್ಠಾನಕ್ಕೆ ವಿನಾ ಕಾರಣ ವಿಳಂಬ ಹಾಗೂ ಉದಾಸೀನ ತೋರಬಾರದು. ಹಾಗೆ ಮಾಡಿದರೆ ನಮ್ಮಷ್ಟಕ್ಕೆ ನಾವೇ ಆತ್ಮವಂಚನೆ ಮಾಡಿಕೊಂಡಂತಾಗುತ್ತದೆ ಎಂದರು.
ಕುಡಿಯುವ ನೀರಿನ ಪೂರೈಕೆಗೆ ಪ್ರಥಮಾದ್ಯತೆ:
ಕುಡಿಯುವ ನೀರಿನ ಸೌಲಭ್ಯವು ಮೂಲಭೂತ ಸೌಲಭ್ಯಗಳಲ್ಲಿ ಒಂದಾಗಿದ್ದು ಈಗಾಗಲೇ ಮಳೆಗಾಲ ಆರಂಭವಾಗಿದ್ದು ಜಿಲ್ಲೆಯಲ್ಲಿ ಮಳೆಯ ನೀರು ಸದ್ಭಳಕೆ ಮಾಡುವ ಕುರಿತು ಹಾಗೂ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ನೀರಿನ ಸಮಸ್ಯೆಯಿರುವ ಗ್ರಾಮಗಳ ಹಾಗೂ ಸಮರ್ಪಕವಾಗಿ ನೀರು ದೊರೆಯುವ ಸ್ಥಳಗಳ ಪಟ್ಟಿ ಮಾಡಿ ನೀರಿನ ಪರಿಸ್ಥಿತಿಯನ್ನು ಅವಲೋಕಿಸುವ ಒಂದು ತಂಡವನ್ನು ಮಾಡಬೇಕು. ಈ ಕುರಿತು ತಹಶೀಲ್ದಾರರು ಹಾಗೂ ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳು, ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಜೆಜೆಎಂ ಕಾಮಗಾರಿ: ಜಲಜೀವನ ಮಿಷನ್ ಯೋಜನೆಯ 336 ಕಾಮಗಾರಿಗಳಲ್ಲಿ 200 ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರು ಸಭೆಗೆ ತಿಳಿಸಿದಾಗ ಬಡವರಿಗೆ ಶಾಶ್ವತವಾಗಿ ನೀರು ಒದಗಿಸುವ ಯೋಜನೆ ಜಲಜೀವನ ಮಿಷನ್ ( ಜೆಜೆಎಂ) ಯೋಜನೆಯಾಗಿದ್ದು ಈ ಯೋಜನೆಯ ಈಗಾಗಲೇ ಅನುಷ್ಟಾನವಾಗಿದ್ದರೂ ಸಹಿತ ಮನೆ ಮನೆಗೆ ನೀರು ಸಮರ್ಪಕವಾಗಿ ಸರಬರಾಜಾಗುತ್ತಿಯೋ ಇಲ್ಲವೋ ಎನ್ನುವುದರ ಪರಿಶೀಲನೆ ಮಾಡಬೇಕು. ಅಲ್ಪಾವಧಿ ಟೆಂಡರ್ ಕರೆದು ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸಂಸದರು ತಿಳಿಸಿದರು.
ಕೃಷಿ ಇಲಾಖೆ ಹಾಗೂ ಸಹಕಾರ ಇಲಾಖೆಗಳು ಸಮನ್ವಯ ಸಾಧಿಸುವಂತೆ ಜಿಲ್ಲಾಧಿಕಾರಿಗಳು ನಿಗಾ ವಹಿಸಬೇಕು.ಸಹಕಾರ ಸಂಘಗಳ ಮೂಲಕ ರೈತರಿಗೆ ಬಿತ್ತನೆ ಬೀಜ ಗೊಬ್ಬರ ಸರಬರಾಜು ಆಗಬೇಕು. ನಗರದ ಕುಡಿಯುವ ನೀರಿನ ಪೂರೈಕೆಯಲ್ಲಿ ಆಗುತ್ತಿರುವ ವ್ಯತ್ಯಯವನ್ನು ಸರಿಪಡಿಸಲು ಜಿಲ್ಲಾಧಿಕಾರಿಗಳು ವಾರಕ್ಕೊಂದು ಸಾರಿಯಾದರೂ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಭೆ ಜರುಗಿಸಿ ಸಮರ್ಪಕ ಕುಡಿಯುವ ನೀರಿನ ಪೂರೈಕೆಯಾಗುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು.
ನರಗುಂದ ಶಾಸಕ ಸಿ.ಸಿ.ಪಾಟೀಲ ಅವರು ಮಾತನಾಡಿ ಜೆಜೆಎಂ ಯೋಜನೆಯಡಿ ಸಮರ್ಪಕ ನೀರು ಸರಬರಾಜಿನ ಕುರಿತು ಪರಿಶೀಲನೆ ನಡೆಸಬೇಕು. ಪೈಪ್ ಒಡೆದು ನೀರು ಪೋಲಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಮಾತನಾಡಿ ಜಿಲ್ಲೆಯಲ್ಲಿ ಬಿತ್ತನೆ ಪ್ರದೇಶದ 65 % ರಷ್ಟು ಬಿತ್ತನೆಯಾಗಿದೆ. ಜಿಲ್ಲೆಯಲ್ಲ್ಲಿ ಹೆಸರು ಪ್ರಮುಖ ಬೆಳೆಯಾಗಿದ್ದು ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಅಭಾವವಿರುವುದಿಲ್ಲ ಎಂದು ಸಭೆಗೆ ತಿಳಿಸಿದರು. ರೈತರಿಗೆ ಸಮರ್ಪಕ ಪ್ರಮಾಣದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಲಭ್ಯವಾಗಬೇಕು. ಕಳಪೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಮಾರಾಟಗಾರರು (ಡೀಲರ್ಸ) ಗಳಿದ್ದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ರೈತರಿಗಿರುವ ಯೋಜನೆಗಳನ್ನು ವಿಳಂಬ ಮಾಡದೇ ಅವರಿಗೆ ದೊರಕಿಸಿದರೆ ಅದೇ ಅವರಿಗೆ ನ್ಯಾಯ ಒದಗಿಸಿದಂತಾಗುತ್ತದೆ ಎಂದು ಸಂಸದರು ಹೇಳಿದರು.
ಸಭೆಯಲ್ಲಿ ಉದ್ಯೋಗ ಖಾತ್ರಿ ಯೋಜನೆ, ಫಸಲ ಬಿಮಾ ಯೋಜನೆ, ಎನ್.ಎಚ್ ಎಂ, ಶಿಕ್ಷಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ಜರುಗಿತು.
ಸಭೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ. ಶಿರಹಟ್ಟಿ ಶಾಸಕ ಚಂದ್ರು ಲಮಾಣಿ. ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್. ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್. ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.