ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕ (ಕದಮನಹಳ್ಳಿ ಕ್ರಾಸ್) ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.
ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಪ್ರವಾಸಕ್ಕೆ ತೆರಳಿದ್ಧ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ 11 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿ,ಇಬ್ಬರು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.
ಹಾವೇರಿ ಕಡೆಯಿಂದ ರಾಣೆಬೆನ್ನೂರು ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು 8 ಜನ ಮಹಿಳೆಯರು ಸೇರಿದಂತೆ ಒಟ್ಟು 13 ಜನ ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದವರನ್ನ ಭದ್ರಾವತಿ ಮೂಲದ ನಿವಾಸಿಗಳೆಂದು ಗುರುತಿಸಲಾಗಿದೆ. ಉಳಿದಂತೆ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.